ಲೋಕಾಯುಕ್ತ ಬಲೆಗೆ ಗಣಿ ಇಲಾಖೆ ಉಪನಿರ್ದೇಶಕಿ,

Mangalore:

Font size:

ಲೋಕಾಯುಕ್ತ ಬಲೆಗೆ ಗಣಿ ಇಲಾಖೆ ಉಪನಿರ್ದೇಶಕಿ,

From Jayaram Udupi

ಮಂಗಳೂರು: ಮನೆ ನಿರ್ಮಿಸುವುದಕ್ಕೆ ಭೂಮಿಯ ಕಲ್ಲು ತೆರವು ಮಾಡಲು ಸಮತಟ್ಟು ಮಾಡುವುದಕ್ಕಾಗಿ ಅಗತ್ಯ ಅನುಮತಿ ನೀಡುವುದಕ್ಕೆ ೫೦ ಸಾವಿರ ರೂ. ಲಂಚ ಬೇಡಿಕೆ ಇರಿಸಿದ ಗಣಿ ಇಲಾಖೆ ಉಪನಿರ್ದೇಶಕಿ, ಇಬ್ಬರು ಸಿಬಂದಿಗಳು ಮಂಗಳೂರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಗಳೂರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ, ಸಿಬಂದಿ ಪ್ರದೀಪ್ ಹಾಗೂ ಉಪನಿರ್ದೇಶಕರ ಚಾಲಕ ಮಧು ಸಿಕ್ಕಿಬಿದ್ದವರು. ವ್ಯಕ್ತಿಯೊಬ್ಬರು ತನ್ನ ಪರಿಚಯದವರ ಹೆಸರಿನಲ್ಲಿರುವ ಉಳ್ಳಾಲ ತಾಲೂಕು ಇರಾ ಗ್ರಾಮದ ಸರ್ವೆ ನಂಬ್ರ ೨೭೯/೫ ರಲ್ಲಿ ೧.೩೯ ಎಕರೆ ವಿಸ್ತೀರ್ಣದ ಜಮೀನಿನ ಪೈಕಿ ೦.೩೫ ಎಕರೆ ಪ್ರದೇಶದಲ್ಲಿ ಮನೆಯನ್ನು ಕಟ್ಟುವ ಉದ್ದೇಶದಿಂದ ಕಟ್ಟಡ ಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿ ನೀಡಲು ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಕಳೆದ ವರ್ಷ ಅ.೨೮ರಂದು ಅರ್ಜಿ ಸಲ್ಲಿಸಿದ್ದರು. ಉಳ್ಳಾಲ ತಹಶೀಲ್ದಾರರು ಜಮೀನಿನಲ್ಲಿ ಲಭ್ಯವಿರುವ ಕಟ್ಟಡಕಲ್ಲು ತೆಗೆಯಲು ಪ್ರಮಾಣಪತ್ರ/ದೃಢಿಕರಣ ಪತ್ರ ನೀಡಬಹುದಾಗಿದೆ ಎಂದು ಈ ವರ್ಷ ಮಾರ್ಚ್ ೨೧ರಂದು ವರದಿ ಸಲ್ಲಿಸಿದ್ದರು, ಆದರೂ ಕೂಡ ಗಣಿ ಇಲಾಖೆಯಿಂದ ಅನುಮತಿ ನೀಡಿರಲಿಲ್ಲ.
ಈ ಬಗ್ಗೆ ಅರ್ಜಿಯ ಬಗ್ಗೆ ವಿಚಾರಿಸಲು ದೂರುದಾರರು ಮಂಗಳೂರು ಗಣಿ ಇಲಾಖೆ ಕಚೇರಿಗೆ ತೆರಳಿದ್ದು, ಉಪನಿರ್ದೇಶಕಿ ಕೃಷ್ಣವೇಣಿ ಅವರು ಸಿಬಂದಿ ಪ್ರದೀಪ್ ಎಂಬವರನ್ನು ಕರೆಯಿಸಿ ಫೈಲಿಗೆ ೫೦,೦೦೦ ರೂ. ತಗೊಳ್ಳಿ, ನಂತರ ಸೈನ್ ಮಾಡುವ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಮತ್ತು ಸಿಬಂದಿ ಪ್ರದೀಪ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಬುಧವಾರ ಉಪನಿರ್ದೇಶಕಿ ಕೃಷ್ಣವೇಣಿ ಅವರು ಚಾಲಕ ಮಧು ಎಂಬವರ ಮೂಲಕ ೫೦,೦೦೦ ರೂ. ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರಚಂದ್ರ, ಡಿವೈಎಸ್ಪಿ ಡಾ|ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಹಾಗೂ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ಮಂಜುನಾಥ, ರಾಜೇಂದ್ರ ನಾಯ್ಕ ಮೊದಲಾದವರಿದ್ದರು.

Prev Post ಸಚಿವ ಎಂ.ಬಿ.ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ 153ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ
Next Post ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜನ್ಮದಿನ; ಜೆಡಿಎಸ್ ನಿಂದ ಬೆಂಗಳೂರಿನಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ