ಶೈಕ್ಷಣಿಕ ಸಮಸ್ಯೆಗಳ ಕುರಿತು ಚರ್ಚೆ ಕಾಲಮಿತಿಯಲ್ಲಿ ಪರಿಹರಿಸಲು ಅಗತ್ಯ ಕ್ರಮಕ್ಕೆ ಸೂಚನೆ
ಬೆಂಗಳೂರು, ಆ.13 -
ಶಾಲಾ ಶಿಕ್ಷಣ ಇಲಾಖೆಯ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇವರ ಅಧ್ಯಕ್ಷತೆಯಲ್ಲಿ ವಿಧಾನ ಸೌಧದಲ್ಲಿ ಇಂದು ಶಿಕ್ಷಕ ಮತ್ತು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಸಮ್ಮುಖದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪನವರೊಂದಿಗೆ ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು.
ಪದವಿ ಹೊಂದಿರುವ ಪಿ.ಎಸ್.ಟಿ ಶಿಕ್ಷಕರನ್ನು ಜಿ.ಪಿ.ಟಿ ಶಿಕ್ಷಕರಾಗಿ ಪದೋನ್ನತಿ ನೀಡುವ ಕುರಿತು ವಿಧಾನ ಪರಿಷತ್ ಸದಸ್ಯರು ಸಚಿವರನ್ನು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ ಈ ವಿಷಯದ ಬಗ್ಗೆ ಈಗಾಗಲೇ ಕ್ರಮ ಕೈಗೊಂಡಿದ್ದು, ಕಾನೂನು ಹಾಗೂ ಡಿ.ಪಿ.ಎ.ಅರ್ ಇಲಾಖೆಯ ಅಭಿಪ್ರಾಯ ಪಡೆಯಲಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿಗಳು ಸಹ ಸಮ್ಮತಿ ವ್ಯಕ್ತಪಡಿಸಿದ್ದು ಶೀಘ್ರದಲ್ಲಿಯೇ ಪಿ.ಎಸ್.ಟಿ ಶಿಕ್ಷಕರ ಪದೋನ್ನತಿ ಕುರಿತು ಅಂತಿಮವಾಗಿ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಸ್ನಾತಕೋತ್ತರ ಪದವಿ ಹೊಂದಿದ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಪರೀಕ್ಷೆ ನಡೆಸಬೇಕೆನ್ನುವ ನಿಯಮವಿದೆ ಎಂಬ ಅಧಿಕಾರಿಗಳ ಉತ್ತರಕ್ಕೆ ಅಸಮಧಾನ ವ್ಯಕ್ತ ಪಡಿಸಿದ ಸಭಾಪತಿ ಬಸವರಾಜ ಹೊರಟ್ಟಿ ಇದು ನ್ಯಾಯಸಮ್ಮತವಲ್ಲ ಈ ಬಗ್ಗೆ ಶಿಕ್ಷಣ ಸಚಿವರು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು. ಪದೋನ್ನತಿ ಪಡೆದ ಶಿಕ್ಷಕರಿಗೆ 15, 20 ಹಾಗೂ 25 ವರ್ಷಗಳಿಗೆ ನೀಡುವ ವೇತನ ಶ್ರೇಣಿಯಲ್ಲಿನ ತಾರತಮ್ಯ ಸರಿಪಡಿಸುವ ಸಂಬAಧ ಈಗಾಗಲೇ ವಿಧಾನ ಪರಿಷತ್ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಿ ಸಮಸ್ಯೆಗೆ ಪರಿಹಾರ ಸೂಚಿಸುವಂತೆ ಕೋರಲಾಗಿದೆ ಎಂದ ಸಭಾಪತಿ ಬಸವರಾಜ ಹೊರಟ್ಟಿ ಈ ಬಗ್ಗೆ ಸಮಿತಿಯ ವರದಿ ಅಧಾರಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವರಿಗೆ ಸೂಚಿಸಿದರು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ 2020 ರ ವರೆಗಿನ ಖಾಲಿ ಹುದ್ದೆಗಳ ಭರ್ತಿ ಕುರಿತು ಕೈಗೊಂಡಿರುವ ಪ್ರಕ್ರಿಯೆ ಬಗ್ಗೆ ಸಚಿವ ಶ್ರೀ ಮಧು ಬಂಗಾರಪ್ಪ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ ಈಗಾಗಲೇ ಮಂಜೂರಾದ ಹುದ್ದೆಗಳಲ್ಲಿಯ ಶಿಕ್ಷಕರ ನಿವೃತ್ತಿಯಿಂದ ತೆರವಾಗುವ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ ಏಕೆ ಬೇಕು ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ ಈ ಸಮಸ್ಯೆ ಪರಿಹಾರಕ್ಕೆ ವೇತನಾನುದಾನ ಅಧಿನಿಯಮಕ್ಕೆ ತಿದ್ದುಪಡಿ ತರುವ ಕುರಿತು ಚಿಂತಿಸಲಾಗುವುದು ಎಂದರು.
ಕಾರ್ಯಭಾರದ ಕೊರತೆ ಇರುವ ಅನುದಾನಿತ ಪದವಿ ಕಾಲೇಜುಗಳ ಉಪನ್ಯಾಸಕರುಗಳನ್ನು ಪದವಿಪೂರ್ವ ಕಾಲೇಜುಗಳಿಗೆ ನಿಯೋಜನೆ ಮಾಡುವ ಕುರಿತು ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಈಗಾಗಲೇ ನೇಮಿಸಿರುವ ಸಮಿತಿ ವರದಿ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಅನುದಾನಿತ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶದ ಅಧಾರದ ಮೇಲೆ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವ ನಿರ್ಧಾರವನ್ನು ಕೈಬಿಡುವಂತೆ ಎಲ್ಲಾ ಶಾಸಕರು ಒಕ್ಕೊರಗಲಿನಿಂದ ಆಗ್ರಹಿಸಿದಾಗ ಇದಕ್ಕೆ ಸಚಿವರು ತಮ್ಮ ಆದೇಶವನ್ನು ಹಿಂಪಡೆಯುವ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ನೀಡಿದರು.
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಬಿ.ಕಾಂ. ಬಿ.ಇಡಿ ವಿದ್ಯಾರ್ಹತೆಯನ್ನು ಪರಿಗಣಿಸುವ ಬಗ್ಗೆ ಉತ್ತರಿಸಿದ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ ಈ ಕುರಿತು ಸದ್ಯದ ನಿಯಮದಲ್ಲಿ ಅವಕಾಶವಿಲ್ಲ. ಕಾನೂನಿಗೆ ತಿದ್ದುಪಡಿ ತರಬೇಕು ಎಂದರು. ಕಟ್ಟಡ ಶಿಥಿಲಗೊಂಡಿರುವ ಖಾಸಗಿ ಅನುದಾನ ರಹಿತ ಶಾಲೆಗಳನ್ನು ಕನಿಷ್ಠ ಎರಡು ವರ್ಷ ಕಾಲ ತಾತ್ಕಾಲಿಕವಾಗಿ ಸ್ಥಳಾಂತರಿಸಲು ಹಾಗೂ ಖಾಸಗಿ ಅನುದಾನ ರಹಿತ ಶಾಲಾ ಕಟ್ಟಡಗಳ 30 ವರ್ಷದ ಭೋಗ್ಯ/ಬಾಡಿಗೆ ಕರಾರು ಅವಧಿ ಪೂರ್ಣಗೊಂಡಿರುವ ಸಂಸ್ಥೆಗಳಿಗೆ ಒಂದು ಬಾರಿ ಸ್ಥಳಾಂತರಕ್ಕೆ ಅನುಮತಿ ನೀಡುವ ಬಗ್ಗೆ ಎಲ್ಲಾ ಶಾಸಕರ ಮನವಿಗೆ ಸ್ಪಂದಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇದಕ್ಕೆ ತಮ್ಮ ಸಹಮತಿಯೂ ಇದೆ. ಈ ಬಗ್ಗೆ ಶೀಘ್ರದಲ್ಲಿಯೇ ನಿರ್ಣಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಶಿಕ್ಷಕ, ಪದವೀಧರ ಕ್ಷೇತ್ರದ ಶಾಸಕರುಗಳು, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯುಕ್ತರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.