ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಿಭಾಗದ 11ನೇ ಸಮ್ಮೇಳನ ಸೆಪ್ಟೆಂಬರ್ 11 ರಿಂದ 14ರ ವರೆಗೆ ಬೆಂಗಳೂರಿನಲ್ಲಿ : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್
ಬೆಂಗಳೂರು, ಸೆ. 10 -
ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಕಾಮನ್‍ವೆಲ್ತ್ ಸಂಸದೀಯ ಸಂಘ ಭಾರತ ವಿಭಾಗದ 11ನೇ ಸಮ್ಮೇಳನವನ್ನು ಸೆಪ್ಟೆಂಬರ್ 11 ರಿಂದ 14ರ ವರೆಗೆ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಸೆಪ್ಟಂಬರ್ 11 ರಂದು ಸಂಜೆ 5.30ಕ್ಕೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗ ಲೋಕಸಭೆಯ ಸಭಾಧ್ಯಕ್ಷರಾದ ಓಂ ಬಿರ್ಲಾ ಅವರು ಉದ್ಘಾಟನೆ ನೆರವೇರಿಸುವರು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಫರೀದ್ ಅವರು ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಭಾಧ್ಯಕ್ಷರು, ಈ ಸಮ್ಮೇಳನದಲ್ಲಿ ರಾಜ್ಯಸಭೆಯ ಉಪಸಭಾಪತಿಯವರು, ಭಾರತ ದೇಶದ ಎಲ್ಲಾ ರಾಜ್ಯಗಳ ವಿಧಾನಸಭೆಯ ಸಭಾಧ್ಯಕ್ಷರುಗಳು, ಉಪಸಭಾಧ್ಯಕ್ಷರುಗಳು, ವಿಧಾನಪರಿಷತ್ತಿನ ಸಭಾಪತಿಗಳು, ಉಪಸಭಾಪತಿಗಳು, ಲೋಕಸಭಾ ಸದಸ್ಯರು, ವಿದೇಶಿ ಗಣ್ಯರು, ಲೋಕಸಭೆ-ರಾಜ್ಯಸಭೆಯ ಮಹಾಕಾರ್ಯದರ್ಶಿಗಳು ಹಾಗೂ ರಾಜ್ಯ ವಿಧಾನಮಂಡಲದ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ವಿಧಾನಸಭೆಯ ಕಾರ್ಯದರ್ಶಿ ಶ್ರೀಮತಿ ಎಂ.ಕೆ. ವಿಶಾಲಾಕ್ಷಿ ಹಾಗೂ ಲೋಕಸಭೆಯ ಸಭಾಧ್ಯಕ್ಷರ ಕಾರ್ಯಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು.