ರಾಜ್ಯ ಕಾಂಗ್ರೆಸ್ ಸರಕಾರದ ಧೋರಣೆ ಖಂಡಿಸಿ ಜಿಲ್ಲೆ, ತಾಲ್ಲೂಕುಗಳಲ್ಲಿ ಹೋರಾಟ: ವಿಜಯೇಂದ್ರ

Banglore:

Font size:

ರಾಜ್ಯ ಕಾಂಗ್ರೆಸ್ ಸರಕಾರದ ಧೋರಣೆ ಖಂಡಿಸಿ ಜಿಲ್ಲೆ, ತಾಲ್ಲೂಕುಗಳಲ್ಲಿ ಹೋರಾಟ: ವಿಜಯೇಂದ್ರ

ಬೆಂಗಳೂರು: ಉತ್ತರ ಕರ್ನಾಟಕ ಮತ್ತು ರೈತರ ವಿಚಾರದಲ್ಲಿ ಕಾಂಗ್ರೆಸ್ ಸರಕಾರ ಚೆಲ್ಲಾಟ ಆಡುತ್ತಿದೆ. ಅಲ್ಲದೇ, ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರದ ಧೋರಣೆ ವಿರುದ್ಧ ಹೋರಾಟ ರೂಪಿಸಲು ಇಂದಿನ ಬಿಜೆಪಿ ಪ್ರಮುಖರ ಸಭೆ ತೀರ್ಮಾನಿಸಿದೆ. ಮೆಕ್ಕೆಜೋಳ ಬೆಳೆಯುವ ರೈತರು ಸಂಕಷ್ಟದಲ್ಲಿದ್ದು, ಎಲ್ಲ ತಾಲ್ಲೂಕುಗಳಲ್ಲಿ ಬಿಜೆಪಿ ಹೋರಾಟ ಮಾಡಲಿದೆ. ರಾಜ್ಯ ಸರಕಾರವು ತಕ್ಷಣ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಒತ್ತಾಯಿಸಲಿದೆ ಎಂದು ಹೇಳಿದರು.
ತುಂಗಭದ್ರಾ ಜಲಾಶಯದ ವ್ಯಾಪ್ತಿಯ 4 ಜಿಲ್ಲೆಗಳ ರೈತರನ್ನು ಸೇರಿಸಿಕೊಂಡು ಸ್ಥಳೀಯವಾಗಿ ಹೋರಾಟ ರೂಪಿಸಲಿದ್ದೇವೆ. ಎರಡನೇ ಬೆಳೆಗೂ ರಾಜ್ಯ ಸರಕಾರ ನೀರನ್ನು ಕೊಡಬೇಕು. ಒಂದು ವೇಳೆ ನೀರು ಬಿಡುಗಡೆ ಮಾಡಲು ಸಾಧ್ಯ ಆಗದೇ ಇದ್ದರೆ ರಾಜ್ಯ ಸರಕಾರವು ಆ ಭಾಗದ ರೈತರಿಗೆ ಎಕರೆಗೆ 25 ಸಾವಿರ ರೂಪಾಯಿ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿದರು.
ತುಂಗಭದ್ರಾ ಜಲಾಶಯದ ಅಣೆಕಟ್ಟಿನ ಕುರಿತು ಸಾಕಷ್ಟು ಬಾರಿ ಚರ್ಚೆ ಆಗಿದೆ. 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದಾಗ ಡಿ.ಕೆ.ಶಿವಕುಮಾರ್ ಅವರು, ಆಂಧ್ರ, ತೆಲಂಗಾಣಕ್ಕೆ ಕಾಯುವುದಿಲ್ಲ; ರಾಜ್ಯ ಸರಕಾರವೇ ಆ ಜವಾಬ್ದಾರಿ ತೆಗೆದುಕೊಳ್ಳಲಿದೆ 32 ಹೊಸ ಕ್ರಸ್ಟ್ ಗೇಟ್ ಅಳವಡಿಸಬೇಕು; ರಾಜ್ಯ ಸರಕಾರ ಹಣ ಬಿಡುಗಡೆ ಮಾಡಲಿದೆ ಎಂದಿದ್ದರು. ಆದರೆ, ಸಮರೋಪಾದಿಯಲ್ಲಿ ನಡೆಯಬೇಕಿದ್ದ ಹೊಸ ಕ್ರಸ್ಟ್ ಗೇಟ್ ಅಳವಡಿಸುವ ಕಾರ್ಯ ಆಗದೇ ಇರುವುದು ದುರ್ದೈವ ಎಂದರು.

ಕಾಲುವೆಗಳ ದುರಸ್ತಿಗೆ ಹಣ ಬಿಡುಗಡೆಗೆ ಒತ್ತಾಯ
ತುಂಗಭದ್ರಾ ಜಲಾಶಯದ ಅಣೆಕಟ್ಟಿಗೆ 32 ಹೊಸ ಕ್ರಸ್ಟ್ ಗೇಟ್ ಅಳವಡಿಕೆ ಮಾತ್ರವಲ್ಲದೇ ಎಡ- ಬಲ ನಾಲೆಗಳ ದುರಸ್ತಿ ಕಾರ್ಯ ನಡೆಸಬೇಕು. ಈ ದುರಸ್ತಿ ಕಾರ್ಯಕ್ಕೆ ರಾಜ್ಯ ಸರಕಾರ ಹಣ ಬಿಡುಗಡೆ ಮಾಡಬೇಕು ಎಂದು ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು.
ಈಗಾಗಲೇ ಸಮಸ್ಯೆ ಕಾಡುತ್ತಿದೆ. ನೀರು ಪೋಲಾಗಿ ಹೋಗುತ್ತಿದೆ ಎಂದು ಗಮನ ಸೆಳೆದರು. ಈ ಮೂರು ವಿಷಯಗಳನ್ನು ಮುಂದಿಟ್ಟು ಬಿಜೆಪಿ, ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟ ರೂಪಿಸಲು ತೀರ್ಮಾನ ಮಾಡಿದೆ. ನವೆಂಬರ್ 26ರೊಳಗೆ ಹೋರಾಟ ರೂಪಿಸಲು ಚರ್ಚಿಸಿದ್ದೇವೆ ಎಂದರು.
ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಅವರು ಜಿಲ್ಲಾ ಪ್ರವಾಸ ಮಾಡಿ ಸ್ಥಳೀಯರ ಜೊತೆ ಚರ್ಚಿಸಿ ಹೋರಾಟದ ದಿನಾಂಕ ನಿಗದಿ ಮಾಡಲಿದ್ದಾರೆ ಎಂದು ಪ್ರಕಟಿಸಿದರು. ರೈತರ ವಿಚಾರದಲ್ಲಿ ರಾಜ್ಯ ಸರಕಾರ ಪದೇಪದೇ ಎಡವುತ್ತಿದೆ ಎಂದು ಟೀಕಿಸಿದರು.

32 ಹೊಸ ಕ್ರಸ್ಟ್ ಗೇಟ್ ಅಳವಡಿಸಲು ಅನುದಾನ ನೀಡದೇ ಕೆಲಸ ಕುಂಟುತ್ತ ಸಾಗಿದೆ. ಸರಕಾರವು ತಕ್ಷಣ ಸ್ಪಂದಿಸಿ ತುಂಗಭದ್ರಾ ಜಲಾಶಯದ ವ್ಯಾಪ್ತಿಯ 4 ಜಿಲ್ಲೆಗಳ ರೈತರ ಎರಡನೇ ಬೆಳೆಗೆ ನೀರನ್ನು ಕೊಡಬೇಕಾಗಿತ್ತು. ಆದರೆ, ಮೊದಲನೇ ಬೆಳೆಗೆ ನೀರು ಹರಿಸುವಿಕೆ ಸರಿಯಾಗಿ ಆಗುತ್ತಿಲ್ಲ ಎಂದು ದೂರಿದರು.
ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ; ಈ ನಾಡಿನ ರೈತರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿಲ್ಲ ಎಂದು ಇಂದಿನ ಪಕ್ಷದ ನಾಯಕರ ಸಭೆ ಅಭಿಪ್ರಾಯಪಟ್ಟಿದೆ ಎಂದರು.
ಬರದ ಸಂದರ್ಭದಲ್ಲಿ ರಾಜ್ಯ ಸರಕಾರ ಎಚ್ಚತ್ತುಕೊಂಡಿಲ್ಲ; ಅತಿವೃಷ್ಟಿ ಸಂದರ್ಭದಲ್ಲೂ ತಲೆ ಕೆಡಿಸಿಕೊಂಡಿಲ್ಲ. ಕಬ್ಬು ಬೆಳೆಗಾರರು ನಿರಂತರ ಹೋರಾಟ ಮಾಡಿದರೂ ಸ್ಪಂದಿಸಿಲ್ಲ; ಈಗ ಮೆಕ್ಕೆಜೋಳ ಬೆಳೆಯುವ ರೈತರೂ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರಕಾರ ಇನ್ನೂ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿಲ್ಲ ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ ಸರಕಾರ ಬೆಂಗಳೂರಿಗೆ ಸೀಮಿತ
ಬೆಳೆಹಾನಿಗೆ ಪರಿಹಾರ ಘೋಷಿಸಿ ಒಂದೂವರೆ ತಿಂಗಳಾದರೂ ಪರಿಹಾರ ಕೊಡುವಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿಲ್ಲ. ವೈರಲ್ ಇನ್‍ಫೆಕ್ಷನ್ ಆಗಿ ಭತ್ತದ ಬೆಳೆ ಹಾನಿಗೊಳಗಾಗಿದೆ. ಇವುಗಳನ್ನು ಚರ್ಚಿಸಿದ್ದು, ರಾಜ್ಯ ಸರಕಾರ ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು. ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಬೆಂಗಳೂರಿಗೆ ಸೀಮಿತವಾಗಿದೆ; ನಾಡಿನ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ. ಶ್ರೀರಾಮುಲು ಇವರೆಲ್ಲರ ನೇತೃತ್ವದಲ್ಲಿ ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಪಕ್ಷದ ಪ್ರಮುಖರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಂಸದರು, ರೈತ ಮೋರ್ಚಾದ ಅಧ್ಯಕ್ಷರ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ರಾಜ್ಯದ ರೈತರ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿದ್ದೇವೆ ಎಂದರು.
ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಕೋರ್ ಕಮಿಟಿ ಸದಸ್ಯ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಮಾಜಿ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಮತ್ತಿತರ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Prev Post ಗುಜರಾಜ್'ನ ಅಹ್ಮದಾಬಾದ್ ಕರ್ನಾಟಕ ಸಂಘದ ರಾಜ್ಯೋತ್ಸವದಲ್ಲಿ ಭಾಗಿಯಾದ ಹೆಚ್.ಡಿ. ಕುಮಾರಸ್ವಾಮಿ
Next Post ಜಪಾನ್ 600 ಕೋಟಿ ರೂಪಾಯಿ ಹೂಡಿಕೆ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ