ಎಸ್‌ಸಿ/ಎಸ್‌ಟಿ ಮೀಸಲಾತಿ ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ನೀಡಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ ಪತ್ರ
ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ನೀಡುವಂತೆ ಕೋರಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ. ವೀರೇಂದ್ರ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಕಾಯ್ದೆಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ. 15ರಿಂದ ಶೇ. 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ. 3ರಿಂದ ಶೇ. 7ಕ್ಕೆ ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು 2022ರಲ್ಲಿ ಕಾಯ್ದೆ ರೂಪಿಸಿತ್ತು. ಈ ಕಾಯ್ದೆಯು 2023ರ ಜನವರಿ 11ರಂದು ರಾಜ್ಯಪಾಲರ ಅಂಕಿತ ಪಡೆದಿದ್ದು, 2022ರ ನವೆಂಬರ್ 1ರಿಂದ ಅನ್ವಯವಾಗುವಂತೆ ಜಾರಿಗೆ ಬಂದಿತ್ತು. ಸುಮಾರು ಏಳು ದಶಕಗಳಿಂದ ಈ ಸಮುದಾಯಗಳ ಮೀಸಲಾತಿ ಪ್ರಮಾಣದಲ್ಲಿ ಬದಲಾವಣೆಯಾಗಿರಲಿಲ್ಲ.
2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಜನಸಂಖ್ಯೆ ಶೇ. 17.15 ಹಾಗೂ ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇ. 6.95ರಷ್ಟಿದೆ. ಸಾಮಾಜಿಕ ಹಾಗೂ ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಪರಿಗಣಿಸಿ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗವು ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸಲು ಅದನ್ನು 9ನೇ ಅನುಸೂಚಿಗೆ ಸೇರಿಸುವಂತೆಯೂ ಆಯೋಗ ಸಲಹೆ ನೀಡಿತ್ತು.
ಆದರೆ ಒಟ್ಟು ಮೀಸಲಾತಿ ಶೇ. 56ಕ್ಕೆ ಏರಿಕೆಯಾಗುವುದು ಶೇ. 50ರ ಮೀಸಲಾತಿ ಮಿತಿಯನ್ನು ಮೀರುತ್ತದೆ ಎಂಬ ಕಾರಣಕ್ಕೆ ಕರ್ನಾಟಕ ಹೈಕೋರ್ಟ್ 2026ರ ಅಕ್ಟೋಬರ್ 12ರಂದು ಮೀಸಲಾತಿ ಹೆಚ್ಚಳದ ನಿಬಂಧನೆಗಳನ್ನು ರದ್ದುಗೊಳಿಸಿದೆ. ಈ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ತಮಿಳುನಾಡಿನಲ್ಲಿ ಶೇ. 69ರ ಮೀಸಲಾತಿಗೆ ಸಂವಿಧಾನಾತ್ಮಕ ರಕ್ಷಣೆ ನೀಡಲು 1994ರಲ್ಲಿ ಸಂವಿಧಾನದ 76ನೇ ತಿದ್ದುಪಡಿ ಮೂಲಕ ಅಲ್ಲಿನ ಕಾಯ್ದೆಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲಾಗಿತ್ತು. ಅದೇ ಮಾದರಿಯಲ್ಲಿ ಕರ್ನಾಟಕದ ಶೇ. 56ರ ಮೀಸಲಾತಿಗೂ ಸಂವಿಧಾನಾತ್ಮಕ ರಕ್ಷಣೆ ನೀಡುವ ಕುರಿತು ಕೇಂದ್ರ ಸರ್ಕಾರ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.
ಕರ್ನಾಟಕ ಸರ್ಕಾರವು 2023ರ ಮಾರ್ಚ್ 23ರಂದೇ ಈ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. 2025ರ ಡಿಸೆಂಬರ್ 18ರಂದು ರಾಜ್ಯ ವಿಧಾನಸಭೆಯಲ್ಲಿಯೂ ಈ ಸಂಬಂಧ ನಿರ್ಣಯ ಅಂಗೀಕರಿಸಲಾಗಿದೆ. 2026ರ ಏಪ್ರಿಲ್ 16ರಂದು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿಗೆ ಪತ್ರ ಬರೆದಿದ್ದರು. ಆದರೂ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದೆ ಎಂಬ ಕಾರಣ ನೀಡಿ ಕೇಂದ್ರ ಸರ್ಕಾರ ಈ ವಿಷಯವನ್ನು ಮುಂದೂಡಿತ್ತು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿದೆ ಎಂಬ ಕಾರಣಕ್ಕೆ ಸಾಮಾಜಿಕ ನ್ಯಾಯದ ಉದ್ದೇಶವನ್ನು ಅನಿರ್ದಿಷ್ಟಾವಧಿಗೆ ಮುಂದೂಡಬಾರದು ಎಂದು ಪರಮೇಶ್ವರ ಅವರು ಪ್ರತಿಪಾದಿಸಿದ್ದಾರೆ. ಸಂವಿಧಾನಾತ್ಮಕ ಸಮಸ್ಯೆಗಳನ್ನು ಪರಿಹರಿಸುವುದರ ಜೊತೆಗೆ ಹಿಂದುಳಿದ ಸಮುದಾಯಗಳ ಶೈಕ್ಷಣಿಕ ಹಾಗೂ ಉದ್ಯೋಗಾವಕಾಶಗಳನ್ನು ರಕ್ಷಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳು ಖುದ್ದು ಮಧ್ಯಪ್ರವೇಶಿಸಿ, ಕರ್ನಾಟಕದ ಮೀಸಲಾತಿ ಹೆಚ್ಚಳ ಕಾಯ್ದೆಯನ್ನು 9ನೇ ಅನುಸೂಚಿಗೆ ಸೇರಿಸಲು ಅಗತ್ಯವಾದ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಆರಂಭಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಇದರೊಂದಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಹಾಗೂ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದೊಂದಿಗೆ ಸಮಾಲೋಚನೆ ನಡೆಸಬೇಕು. ಕೇಂದ್ರ ಕಾನೂನು ಮತ್ತು ನ್ಯಾಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಬುಡಕಟ್ಟು ವ್ಯವಹಾರಗಳು ಹಾಗೂ ಗೃಹ ಸಚಿವಾಲಯಗಳು ಸಮನ್ವಯದಿಂದ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.
ದೇಶದ ಬದಲಾಗುತ್ತಿರುವ ಸಾಮಾಜಿಕ ಪರಿಸ್ಥಿತಿಗೆ ಅನುಗುಣವಾಗಿ ಶೇ. 50ರ ಮೀಸಲಾತಿ ಮಿತಿಯ ಪ್ರಸ್ತುತತೆ ಕುರಿತು ರಾಷ್ಟ್ರಮಟ್ಟದಲ್ಲಿ ವ್ಯಾಪಕ ಚರ್ಚೆ ನಡೆಸುವ ಅಗತ್ಯವಿದೆ ಎಂದೂ ಪತ್ರದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ. ಸಾಮಾಜಿಕ ನ್ಯಾಯದ ವಿಚಾರವು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿದ್ದು, ಶತಮಾನಗಳಿಂದ ಅವಕಾಶವಂಚಿತರಾದ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಮಾನ ಅವಕಾಶ ಕಲ್ಪಿಸುವುದು ರಾಷ್ಟ್ರದ ಸಾಮೂಹಿಕ ಕರ್ತವ್ಯವಾಗಿದೆ ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ದೀರ್ಘಕಾಲದ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ, ನಿಗದಿತ ಅವಧಿಯೊಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ಡಾ. ಜಿ. ಪರಮೇಶ್ವರ ಅವರು ಆಗ್ರಹಿಸಿದ್ದಾರೆ.






Comments
Leave a Comment