ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಗಂಭೀರವಾಗಿ ಪರಿಗಣಿಸಲು ನಿರ್ಧಾರ- ವಿಜಯೇಂದ್ರ
ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ
ಗಂಭೀರವಾಗಿ ಪರಿಗಣಿಸಲು ನಿರ್ಧಾರ- ವಿಜಯೇಂದ್ರ
ಬೆಂಗಳೂರು: ರಾಜ್ಯದಲ್ಲಿ ನಡೆಯುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲು ಬಿಜೆಪಿ ನಿರ್ಧರಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು ರಮಡಾ ರೆಸಾರ್ಟ್‍ನಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯಿತು. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ, ಸಹ ಉಸ್ತುವಾರಿ ಕಾಸಂ ವೆಂಕಟೇಶ್ವರಲು, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪ್ರಮುಖರು ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಬಿಜೆಪಿ ಅತ್ಯಂತ ಗಂಭೀರವಾಗಿ ಪರಿಗಣಿಸಲಿದೆ. ಕಾರ್ಯಕರ್ತರ ಚುನಾವಣೆ ಎಂದೇ ಪರಿಗಣಿಸುವÀ ಈ ಚುನಾವಣೆಯಲ್ಲಿ ಗೆಲ್ಲುವ ದೃಷ್ಟಿಯಿಂದ ಸಂಘಟನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಎಲ್ಲ ನಾಯಕರು ಜಿಲ್ಲೆ, ತಾಲ್ಲೂಕುಗಳಿಗೆ ಪ್ರವಾಸ ಮಾಡಲಿದ್ದಾರೆ ಎಂದು ವಿವರಿಸಿದ್ದಾರೆ.
ಹಾಲು, ಸ್ಟಾಂಪ್ ಪೇಪರ್, ಸರಕಾರಿ ಬಸ್ ಪ್ರಯಾಣದರ ಏರಿಕೆ, ಆಲ್ಕೋಹಾಲ್ ದರ ಏರಿಕೆ, ಡೀಸೆಲ್, ಪೆಟ್ರೋಲ್ ಸುಂಕ ಹೆಚ್ಚಳ ಸೇರಿ ಎಲ್ಲ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸುವ ಸ್ಥಿತಿ ಇದೆ. ಇನ್ನೊಂದೆಡೆ ಸರಕಾರ ಆಡಳಿತಾತ್ಮಕವಾಗಿ ಅತ್ಯಂತ ನಿಷ್ಕ್ರಿಯ ಸ್ಥಿತಿಗೆ ತಲುಪಿದ್ದು, ಭ್ರಷ್ಟಾಚಾರ ಮಿತಿ ಮೀರಿದೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿವೆ. ಬರಗಾಲದಿಂದ ರೈತರ ಸಂಕಷ್ಟ ತೀವ್ರವಾಗಿದೆ. ಜನ, ಜಾನುವಾರುಗಳು ಇದರಿಂದ ಕಷ್ಟ ಅನುಭವಿಸುವಂತಾಗಿದೆ ಎಂಬ ವಿಚಾರಗಳು ಸಭೆಯಲ್ಲಿ ಚರ್ಚೆಗೆ ಬಂದವು. ಈ ಸರಕಾರವು ಸುಳ್ಳು ಹೇಳುವ ಹಾಗೂ ತಪ್ಪು ಮಾಹಿತಿ ನೀಡುವ ವಿಚಾರಗಳೂ ಚರ್ಚೆಗೆ ಒಳಪಟ್ಟವು.
ಈ ಸರಕಾರವು ರೈತರನ್ನು ಭಿಕ್ಷುಕರಂತೆ ಕಾಣುತ್ತಿದೆ. ಬರ ಪರಿಹಾರ ಮೊತ್ತವನ್ನು ಸರಿಯಾಗಿ ನೀಡಿಲ್ಲ. ಬರಗಾಲ ನಿರ್ವಹಣೆಯಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ವಿಧವಾ ಮಾಸಾಶನ, ಹಿರಿಯ ನಾಗರಿಕರ ಪಿಂಚಣಿಯನ್ನೂ ಕಳೆದ ಕೆಲವು ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ.
ಮುಂಬರುವ ಚುನಾವಣೆಗಳಲ್ಲಿ ಗೆಲುವು ಖಚಿತ
ಇವೆಲ್ಲವನ್ನೂ ಕ್ರೋಡೀಕರಿಸಿ ಜನರ ಮುಂದಿಡಲಾಗುವುದು. ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷವು ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತೀವ್ರ ಬೆಲೆ ಹೆಚ್ಚಳ, ಹದಗೆಟ್ಟ ಕಾನೂನು ಸುವ್ಯವಸ್ಥೆ ಸೇರಿದಂತೆ ಇವೆಲ್ಲ ವಿಚಾರಗಳ ಕುರಿತು ಜನಜಾಗೃತಿ ಮೂಡಿಸಲು ಎಲ್ಲ ತಾಲ್ಲೂಕುಗಳಲ್ಲೂ ಹೋರಾಟ ರೂಪಿಸುವ ಕುರಿತು ಚರ್ಚೆ ನಡೆಯಿತು.






Comments
Leave a Comment