PRABHAVAA.COM

ಕೇಂದ್ರದ ಅನುದಾನದ ಬಗ್ಗೆ ಸುಳ್ಳು ಆರೋಪ ಮಾಡುವ ಬದಲು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

Mysuru:

Font size:

ಗ್ರಾಮ ಪಂಚಾಯಿತಿಗಳಿಗೆ ಕೇಂದ್ರ ನೀಡಿದ ಅನುದಾನದಲ್ಲಿ ಸುಮಾರು ₹225 ಕೋಟಿ ವ್ಯತ್ಯಾಸ: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ರಾಜ್ಯ ಸರ್ಕಾರ ಆರ್ಥಿಕ ದಿವಾಳಿತನಕ್ಕೆ ತಲುಪಿದೆ, ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಆರೋಪ

ಮೈಸೂರು, ನವೆಂಬರ್‌ 18

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುತ್ತಿರುವ ಅನುದಾನದ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ, ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಹೇಳುತ್ತಿರುವ ರಾಜ್ಯ ಸರ್ಕಾರ ಮೊದಲು ತನ್ನ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನೀಡಿರುವ ಅನುದಾನವನ್ನು ಸ್ಥಳೀಯ ಸಂಸ್ಥೆಗಳಿಗೆ ಸಮರ್ಪಕವಾಗಿ ಬಿಡುಗಡೆ ಮಾಡದೆ, ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಆರೋಪ ಮಾಡುವುದು ಸರಿಯಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ರಾಜ್ಯಕ್ಕೆ ಹೆಚ್ಚಿನ ಪ್ರಯೋಜನವಾಗಲಿದೆ. ಆದರೆ, ರಾಜ್ಯ ಸರ್ಕಾರ ಪದೇಪದೇ ಕೇಂದ್ರದೊಂದಿಗೆ ಸಂಘರ್ಷಕ್ಕೆ ಇಳಿಯುವ ಮೂಲಕ ಅಭಿವೃದ್ಧಿಗೆ ಅಡ್ಡಿಯಾಗುತ್ತಿದೆ. ಈ ಹಿಂದೆ ಸಿದ್ದರಾಮಯ್ಯನವರು ಕೇಂದ್ರದೊಂದಿಗೆ ಸಂಘರ್ಷಕ್ಕೆ ಇಳಿಯುತ್ತಿದ್ದರು. ಈಗ ಡಿ.ಕೆ.ಶಿವಕುಮಾರ್‌ ಕೂಡ ಅದೇ ಹಾದಿ ಹಿಡಿದಿದ್ದಾರೆ ಎಂದರು.

ಅನುದಾನದಲ್ಲಿ ₹225 ಕೋಟಿ ವ್ಯತ್ಯಾಸ

2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗಾಗಿ ₹2,133.25 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಆದರೆ, ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ವರ್ಗಾಯಿಸಿರುವ ಹಣ ಕೇವಲ ₹1,907 ಕೋಟಿ ಮಾತ್ರ. ಇದರಿಂದ ಸುಮಾರು ₹225 ಕೋಟಿ ವ್ಯತ್ಯಾಸ ಕಂಡುಬಂದಿದೆ. ಕೇಂದ್ರದಿಂದ ಹಣ ಬಿಡುಗಡೆಯಾದ ಹತ್ತು ದಿನಗಳೊಳಗೆ ರಾಜ್ಯ ಸರ್ಕಾರ ಅದನ್ನು ಗ್ರಾಮ ಪಂಚಾಯಿತಿಗಳಿಗೆ ವರ್ಗಾಯಿಸಬೇಕು ಎಂಬ ನಿಯಮವಿದೆ. ಇದು ಕೇಂದ್ರ ಸರ್ಕಾರ ಹೊಸದಾಗಿ ರೂಪಿಸಿರುವ ನಿಯಮವಲ್ಲ. ಹಿಂದಿನ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲೇ ರೂಪಿಸಲಾದ ನಿಯಮವಾಗಿದೆ. ಕಾಂಗ್ರೆಸ್‌ ಸರ್ಕಾರವೇ ರೂಪಿಸಿದ ನಿಯಮವನ್ನು ಈಗಿನ ಕಾಂಗ್ರೆಸ್‌ ಸರ್ಕಾರ ಪಾಲಿಸುತ್ತಿಲ್ಲ ಎಂದರು.

ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲು ಚುನಾವಣೆಗಳು ನಡೆಯುವುದು ಕೂಡ ಪ್ರಮುಖ ಮಾನದಂಡವಾಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ರಾಜ್ಯ ಸರ್ಕಾರ ನಿರಂತರವಾಗಿ ಮುಂದೂಡುತ್ತಿದೆ. ಚುನಾವಣೆ ನಡೆಸದೆ ಕೇಂದ್ರ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸುವುದು ಎಷ್ಟು ಸರಿ? ಗ್ರಾಮ ಪಂಚಾಯಿತಿಗಳಿಗೆ ಬಂದಿರುವ ಹಣದ ಸಂಪೂರ್ಣ ಲೆಕ್ಕವನ್ನು ರಾಜ್ಯ ಸರ್ಕಾರ ಬಹಿರಂಗಪಡಿಸಬೇಕು. ಅನುದಾನದಲ್ಲಿ ಆಗಿರುವ ವ್ಯತ್ಯಾಸಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಈ ಹಣ ಬಿಡುಗಡೆಯಾಗದಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ಬೀದಿ ದೀಪ, ಒಳಚರಂಡಿ ಹಾಗೂ ಸ್ವಚ್ಛತೆ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ ತನ್ನ ತಪ್ಪನ್ನು ಸರಿಪಡಿಸಿಕೊಳ್ಳುವ ಬದಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದರು.

ರೈತರ ಪರಿಹಾರಕ್ಕೂ ಹಣ ಕೊರತೆ

ಬರಗಾಲದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ₹2,500 ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ನಂತರ ₹5,000 ನೀಡುವುದಾಗಿ ಹೇಳಿತು. ಆದರೆ, ರೈತರ ಖಾತೆಗಳಿಗೆ ₹1,000, ₹1,500 ಮಾತ್ರ ಜಮೆಯಾಗುತ್ತಿದೆ. ಆರಂಭದಲ್ಲಿ ₹2,500 ನೀಡಿದ ಹಣವೂ ಹಂತ ಹಂತವಾಗಿ ಕಡಿಮೆಯಾಗುತ್ತಿದೆ. ಇದಕ್ಕೆ ಕಂಪ್ಯೂಟರ್‌ ತಾಂತ್ರಿಕ ದೋಷ ಎಂದು ಸರ್ಕಾರ ಸಮಜಾಯಿಷಿ ನೀಡುತ್ತಿದೆ. ರಾಜ್ಯದಲ್ಲಿ ಐಟಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಹೆಮ್ಮೆಪಡುವ ಸರ್ಕಾರ ರೈತರಿಗೆ ಪರಿಹಾರ ನೀಡುವ ವಿಚಾರದಲ್ಲಿ ತಾಂತ್ರಿಕ ದೋಷದ ನೆಪ ಹೇಳುತ್ತಿರುವುದು ವಿಪರ್ಯಾಸ ಎಂದರು.

ರೈತರಿಗೆ ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲದಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಲಾಗುತ್ತಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುವ ಬದಲು ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಬಾಕಿ ಇರುವ ಹಣದ ಬಗ್ಗೆಯೂ ಸರ್ಕಾರ ಉತ್ತರ ನೀಡಬೇಕು. ಸುಮಾರು ₹5,000 ಕೋಟಿ ಹಣ ಬಾಕಿ ಉಳಿದಿರುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ಹಣಕಾಸು ಇಲಾಖೆಯೇ ಆರ್ಥಿಕ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆ ನೀಡುತ್ತಿರುವಾಗ ಸರ್ಕಾರ ಹೊಸ ಹೊಸ ಘೋಷಣೆಗಳನ್ನು ಮಾಡುತ್ತಿದೆ ಎಂದರು.

ಪಿಂಚಣಿದಾರರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೂ ಅನ್ಯಾಯ

ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಅಂಗವಿಕಲರ ಪಿಂಚಣಿ ಸರಿಯಾಗಿ ಬಿಡುಗಡೆಯಾಗುತ್ತಿಲ್ಲ. ಕಳೆದ ಹಲವು ತಿಂಗಳುಗಳಿಂದ ಪಿಂಚಣಿ ಸಿಗದೆ ವೃದ್ಧರು, ವಿಧವೆಯರು ಮತ್ತು ಅಂಗವಿಕಲರು ಸಂಕಷ್ಟ ಅನುಭವಿಸುತ್ತಿದ್ದಾರೆ. ತಮ್ಮ ಹಕ್ಕಿನ ಹಣಕ್ಕಾಗಿ ಅಂಗವಿಕಲರು ಮೈಸೂರಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ರಾಜ್ಯದ ಆಡಳಿತ ವ್ಯವಸ್ಥೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದರು.

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರಿಗೆ ನೀಡಿದ ಭರವಸೆಗಳು ಇನ್ನೂ ಈಡೇರಿಲ್ಲ. ಪ್ರಿಯಾಂಕಾ ಗಾಂಧಿ ಅವರು ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳೂ ಜಾರಿಯಾಗಿಲ್ಲ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕಾರ್ಯಕರ್ತರು ವಿಧಾನಸೌಧದ ಮುಂದೆ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಅವರ ಸಮಸ್ಯೆಗಳನ್ನು ಪರಿಹರಿಸುವ ಬದಲು ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.

ಬೆಂಗಳೂರಿನಲ್ಲಿ ಕಸದ ರಾಶಿ, ಪೌರಕಾರ್ಮಿಕರಿಗೆ ಸಂಬಳವಿಲ್ಲ

ಬೆಂಗಳೂರಿನಲ್ಲಿ ಕಸ ವಿಲೇವಾರಿ ಮಾಡುವ ಗುತ್ತಿಗೆದಾರರಿಗೆ ಕಳೆದ ಐದು ತಿಂಗಳಿಂದ ಹಣ ಪಾವತಿಯಾಗಿಲ್ಲ. ಇದರಿಂದ ಪೌರಕಾರ್ಮಿಕರಿಗೂ ಸಂಬಳ ನೀಡಲು ಸಾಧ್ಯವಾಗುತ್ತಿಲ್ಲ. ನಗರದಲ್ಲಿ ಎಲ್ಲೆಡೆ ಕಸದ ರಾಶಿ ಕಾಣುತ್ತಿದೆ. ನಗರದ ಸ್ವಚ್ಛತೆಯನ್ನು ಕಾಪಾಡುವ ಶ್ರಮಜೀವಿಗಳಿಗೆ ಸಂಬಳ ನೀಡಲು ಸಾಧ್ಯವಾಗದ ಸರ್ಕಾರ ಆಡಳಿತ ನಡೆಸುವ ನೈತಿಕತೆ ಹೊಂದಿದೆಯೇ ಎಂದು ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರ ಸೇವೆಯನ್ನು ಗೌರವಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ನೀಡಲು ವಿಫಲವಾಗಿದೆ. 2023ರಲ್ಲಿ ದೇವಸ್ಥಾನಗಳ ನಿರ್ಮಾಣ ಮತ್ತು ದುರಸ್ತಿಗಾಗಿ ಮಂಜೂರಾದ ಅನುದಾನದಡಿ ಕೆಲಸ ಮಾಡಿದ ಗುತ್ತಿಗೆದಾರರಿಗೂ ಹಣ ಪಾವತಿಯಾಗಿಲ್ಲ. ಸರ್ಕಾರದ ಬಳಿ ಹಣವಿಲ್ಲದಿರುವುದರಿಂದ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಹಣಕಾಸು ಇಲಾಖೆಯೇ ಸರ್ಕಾರದ ಆರ್ಥಿಕ ಪರಿಸ್ಥಿತಿಯನ್ನು ಬಯಲು ಮಾಡಿದೆ

ರಾಜ್ಯ ಸರ್ಕಾರದ ಸಾಲ ಮಿತಿ ಮೀರಿದೆ. ಹಣಕಾಸು ಇಲಾಖೆಯ ಪತ್ರಗಳಲ್ಲೇ ಸಾಲ ಪಡೆಯುವ ಮಿತಿಯ ಬಗ್ಗೆ ಆತಂಕ ವ್ಯಕ್ತವಾಗಿದೆ. ಹೀಗಿರುವಾಗ ಮಂಗಳೂರು, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಹೋದಾಗ ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಘೋಷಿಸುವುದು ಕೇವಲ ಪ್ರಚಾರಕ್ಕಾಗಿ. ಘೋಷಣೆ ಮಾಡಿದ ಹಣವನ್ನು ಬಿಡುಗಡೆ ಮಾಡುವ ಸಾಮರ್ಥ್ಯ ಸರ್ಕಾರಕ್ಕಿಲ್ಲ ಎಂದು ಟೀಕಿಸಿದರು.

ಉದ್ಯೋಗ ಖಾತರಿ ಯೋಜನೆಯಡಿ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದರೂ, ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನವನ್ನು ಸಮರ್ಪಕವಾಗಿ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ಗ್ರಾಮೀಣ ಪ್ರದೇಶದ ಉದ್ಯೋಗ ಸೃಷ್ಟಿ ಮತ್ತು ಕಾಮಗಾರಿಗಳಿಗೆ ತೊಂದರೆಯಾಗುತ್ತಿದೆ. ಕೇಂದ್ರದ ಅನುದಾನವನ್ನು ಪಡೆದುಕೊಂಡು ರಾಜ್ಯದ ಪಾಲಿನ ಹಣ ನೀಡದೆ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಯೇ ಇಲ್ಲ

ಎಚ್‌.ಡಿ.ಕೋಟೆ ತಾಲೂಕಿನ ಆಸ್ಪತ್ರೆಯೊಂದಕ್ಕೆ ಇತ್ತೀಚೆಗೆ ಭೇಟಿ ನೀಡಿದಾಗ ಅಲ್ಲಿನ ದುಸ್ಥಿತಿ ನೋಡಿದೆ. ಆಸ್ಪತ್ರೆ ಆರಂಭವಾಗಿ ಸುಮಾರು ಮೂರು ವರ್ಷಗಳಾಗಿದ್ದರೂ ವೈದ್ಯರು, ನರ್ಸ್‌ಗಳು ಹಾಗೂ ಅಗತ್ಯ ಸಿಬ್ಬಂದಿ ಇಲ್ಲ. ಒಟ್ಟು 12 ಸಿಬ್ಬಂದಿ ನೇಮಕವಾಗಿದ್ದಾರೆ ಎಂದು ದಾಖಲೆಗಳಲ್ಲಿದ್ದರೂ ಸ್ಥಳದಲ್ಲಿ ಒಬ್ಬ ವಾಚ್‌ಮನ್‌ ಮಾತ್ರ ಇದ್ದರು. ರೋಗಿಗಳಿಗೆ ಚಿಕಿತ್ಸೆ ನೀಡಲು ಅಗತ್ಯ ವ್ಯವಸ್ಥೆಗಳಿದ್ದರೂ ಸಿಬ್ಬಂದಿಯಿಲ್ಲದೆ ಅವು ಬಳಕೆಯಾಗುತ್ತಿಲ್ಲ. ಗ್ರಾಮೀಣ ಭಾಗದ ಆರೋಗ್ಯ ವ್ಯವಸ್ಥೆಯ ಬಗ್ಗೆ ಸರ್ಕಾರಕ್ಕೆ ಎಷ್ಟು ನಿರ್ಲಕ್ಷ್ಯವಿದೆ ಎಂಬುದಕ್ಕೆ ಇದು ಉದಾಹರಣೆ ಎಂದರು.

ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಅವಮಾನ

ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದ ಆಸನದ ವಿಚಾರವಾಗಿ ಪ್ರತಿಕ್ರಿಯಿಸಿದ ಆರ್‌.ಅಶೋಕ, ಕರ್ನಾಟಕದ ಮುಖ್ಯಮಂತ್ರಿಯಾಗಿರುವ, ಹಿಂದುಳಿದ ವರ್ಗದ ಪ್ರಭಾವಿ ನಾಯಕರೆಂದು ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರನ್ನು ಐದನೇ ಅಥವಾ ಆರನೇ ಸಾಲಿನಲ್ಲಿ ಕೂರಿಸಿರುವುದು ಅವರಿಗೆ ಮಾತ್ರವಲ್ಲ, ಇಡೀ ಕರ್ನಾಟಕದ ಜನತೆಗೆ ಮಾಡಿದ ಅವಮಾನವಾಗಿದೆ ಎಂದು ಟೀಕಿಸಿದರು.

16 ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ನೀಡಿದ ಗೌರವ ಇದೇನಾ? ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ಮೆಟ್ರೋ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಆತ್ಮೀಯವಾಗಿ ತಮ್ಮ ಬಳಿ ಕರೆದು ಒಟ್ಟಿಗೆ ಫ್ಲ್ಯಾಗ್‌ ಆಫ್‌ ಮಾಡಿದರು. ಆದರೆ, ಕಾಂಗ್ರೆಸ್‌ ನಾಯಕತ್ವ ತನ್ನದೇ ಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಬೇರೆಯಾಗಿದೆ. ಇದು ಕಾಂಗ್ರೆಸ್‌ನ ಆಂತರಿಕ ಪರಿಸ್ಥಿತಿಯನ್ನು ತೋರಿಸುತ್ತದೆ ಎಂದರು.

ಬಹಿರಂಗ ಚರ್ಚೆಗೆ ಸಿದ್ಧ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನದ ವಿಚಾರದಲ್ಲಿ ಯಾವುದೇ ಬಹಿರಂಗ ಚರ್ಚೆಗೂ ನಾನು ಸಿದ್ಧನಿದ್ದೇನೆ. ಕೇಂದ್ರ ಸರ್ಕಾರ ಎಷ್ಟು ಹಣ ಬಿಡುಗಡೆ ಮಾಡಿದೆ, ರಾಜ್ಯ ಸರ್ಕಾರ ಎಷ್ಟು ಹಣವನ್ನು ಸ್ಥಳೀಯ ಸಂಸ್ಥೆಗಳಿಗೆ ವರ್ಗಾಯಿಸಿದೆ ಎಂಬುದರ ಸಂಪೂರ್ಣ ದಾಖಲೆಗಳೊಂದಿಗೆ ಚರ್ಚೆ ಮಾಡೋಣ. ರಾಜ್ಯ ಸರ್ಕಾರ ಮೊದಲು ತನ್ನ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು. ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಹೇಳುವ ಮೂಲಕ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡಬಾರದು. ರಾಜ್ಯ ಸರ್ಕಾರದ ಆರ್ಥಿಕ ವೈಫಲ್ಯ, ಅನುದಾನ ಬಿಡುಗಡೆ ವಿಳಂಬ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸದಿರುವುದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಕೂಡಲೇ ತನ್ನ ಜವಾಬ್ದಾರಿಯನ್ನು ಅರಿತುಕೊಂಡು ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

Comments

Leave a Comment

Prev Post ಬೆಂಗಳೂರು ಸುತ್ತಮುತ್ತ ಸಾವಿರ ಎಕರೆಯಲ್ಲಿ ಮಾದರಿ ಸ್ಟಾರ್ಟಪ್ ಪಾರ್ಕ್: ಎಂ ಬಿ ಪಾಟೀಲ
Next Post ಏರ್‌ಪೋರ್ಟ್‌ಗೆ ಹೆಬ್ಬಾಳ ಮಾದರಿಯಲ್ಲಿ ಹೊಸ ಫ್ಲೈಓವರ್ ಚಿಂತನೆ : ಸಿಎಂ ಡಿ.ಕೆ.ಶಿವಕುಮಾರ್

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News