ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ಅಧಿಕಾರ ಸ್ವೀಕಾರ
ಬೆಂಗಳೂರು, ಜೂ. 25-
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ, ಡಿಐಜಿ ಎಂ.ಎನ್. ಅನುಚೇತ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಡಿಜಿಪಿ ಹೇಮಂತ್ ಎಂ. ನಿಂಬಾಳ್ಕರ್ ಅವರು ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ನೂತನ ಆಯುಕ್ತರಿಗೆ ಶುಭಕೋರಿದರು. ಸರ್ಕಾರವು ಅನುಚೇತ್ ಅವರಿಗೆ ವಾರ್ತಾ ಇಲಾಖೆಯ ಜೊತೆಗೆ ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಪ್ರಭಾರವನ್ನು ನೀಡಿದೆ.
ಮೂಲತಃ ಕೋಲಾರ ಜಿಲ್ಲೆಯವರಾದ ಅನುಚೇತ್ ಅವರು 2006ರಲ್ಲಿ ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಿಂದ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ನಾಗರಿಕ ಸೇವೆಗೆ ಸೇರುವ ಉದ್ದೇಶದಿಂದ ಶ್ರಮಿಸಿ, 2008ರ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿ, 2009ರ ಬ್ಯಾಚ್‌ನ ಕರ್ನಾಟಕ ವೃಂದದ ಐಪಿಎಸ್ ಅಧಿಕಾರಿಯಾಗಿ ಆಯ್ಕೆಯಾದರು.
ಪೊಲೀಸ್ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ ಹಾಗೂ ಸಮರ್ಥ ಆಡಳಿತಕ್ಕಾಗಿ ಹೆಸರಾಗಿರುವ ಅನುಚೇತ್ ಅವರು, ಕೈಗೊಂಡ ಅತ್ಯುತ್ತಮ ತನಿಖಾ ಕಾರ್ಯಗಳಿಗೆ ಕೇಂದ್ರ ಸರ್ಕಾರದಿಂದ “ಕೇಂದ್ರ ಗೃಹ ಸಚಿವರ ತನಿಖೆಗಾಗಿನ ಅತ್ಯುತ್ತಮ ಪದಕ”ವನ್ನು ಪಡೆದಿದ್ದಾರೆ.
2011ರಲ್ಲಿ ಪುತ್ತೂರಿನ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ವೃತ್ತಿಜೀವನ ಆರಂಭಿಸಿದ ಅವರು, ಬಳಿಕ ಸಿಐಡಿ ವಿಭಾಗದ ಎಸ್ಪಿ, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹಾಗೂ ಇತ್ತೀಚೆಗೆ ನಗರದ ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸಂಚಾರ ನಿಯಂತ್ರಣಕ್ಕೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಅಳವಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಹುದ್ದೆಗೆ ಬರುವ ಮುನ್ನ ಅವರು ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ್, ಸಿದ್ದೇಶ್ವರಪ್ಪ ಜಿ.ಬಿ., ಸಿ.ಆರ್. ನವೀನ್, ಉಪನಿರ್ದೇಶಕರಾದ ಬಿ.ಕೆ. ರಾಮಲಿಂಗಪ್ಪ, ಶಫಿ ಸಾದುದ್ಧಿನ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.



Comments
Leave a Comment