ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ಸಿಗುವ ವಿಶ್ವಾಸ: ಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಹಿನ್ನೆಲೆ ಲಕ್ಷ್ಮೀ ಹೆಬ್ಬಾಳಕರ್
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ಸಿಗುವ ವಿಶ್ವಾಸ: ಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಹಿನ್ನೆಲೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸುತ್ತಿರುವುದು ಉತ್ತರ ಕರ್ನಾಟಕದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ ಎಂದು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆಗಳಿದ್ದು, ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಗೃಹಲಕ್ಷ್ಮೀ ಯೋಜನೆ ಕುರಿತು ಮಾತನಾಡಿದ ಅವರು, ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಗೆ ತಂದಿರುವ ಈ ಯೋಜನೆ ವಿಶ್ವದಲ್ಲೇ ಮಾದರಿಯಾಗಿದ್ದು, ಅದರ ಯಶಸ್ಸನ್ನು ಗಮನಿಸಿ ಎನ್‌ಡಿಎ ಆಡಳಿತದ ಕೆಲವು ರಾಜ್ಯಗಳೂ ಇದೇ ಮಾದರಿಯ ಯೋಜನೆಗಳನ್ನು ಜಾರಿಗೊಳಿಸಿವೆ ಎಂದು ಹೇಳಿದರು. ಕೇಂದ್ರ ಸರ್ಕಾರದ ಮಟ್ಟದಲ್ಲಿಯೂ ಗೃಹಲಕ್ಷ್ಮೀ ಯೋಜನೆಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದ ಅವರು, ಯೋಜನೆ ಕುರಿತು ವಿಪಕ್ಷಗಳು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಹೆಬ್ಬಾಳಕರ್, ಬೆಳಗಾವಿ ರಾಜ್ಯದ ಅತಿದೊಡ್ಡ ಜಿಲ್ಲೆಯಾಗಿದ್ದು, ಇಲ್ಲಿಂದ ಕಾಂಗ್ರೆಸ್‌ನ 11 ಶಾಸಕರು ಆಯ್ಕೆಯಾಗಿದ್ದಾರೆ. ಹೀಗಾಗಿ ಜಿಲ್ಲೆಗೆ ಇನ್ನೂ ಎರಡು ಸಚಿವ ಸ್ಥಾನಗಳು ದೊರೆಯುವ ನಿರೀಕ್ಷೆಯಿದ್ದು, ಈ ಕುರಿತು ಪಕ್ಷದ ನಾಯಕತ್ವ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು. ಸಚಿವ ಸ್ಥಾನ ಯಾರಿಗೆ ಸಿಗಲಿದೆ ಎಂಬ ಪ್ರಶ್ನೆಗೆ, "ಅದನ್ನು ಮುಖ್ಯಮಂತ್ರಿಗಳನ್ನೇ ಕೇಳಿ" ಎಂದು ಉತ್ತರಿಸಿದರು.
ಬೆಳಗಾವಿಯ ಅಭಿವೃದ್ಧಿ ಕುರಿತು ಮಾತನಾಡಿದ ಅವರು, ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಿದ್ದು, ಗೋವಾ ಹಾಗೂ ಮುಂಬೈಗೆ ಸಮೀಪದಲ್ಲಿರುವ ಕಾರಣ ಕೈಗಾರಿಕಾ ಹೂಡಿಕೆಗೆ ಅತ್ಯಂತ ಸೂಕ್ತ ಪ್ರದೇಶವಾಗಿದೆ. ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾದರೆ ಉದ್ಯೋಗಾವಕಾಶಗಳು ಹೆಚ್ಚಲಿದ್ದು, ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲೆ ವಿಭಜನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯಕ್ಕೆ ಆ ವಿಚಾರ ಅಪ್ರಸ್ತುತವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ವಿಚಾರಗಳಿಗೆ ಆದ್ಯತೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಜಿಲ್ಲೆ ವಿಭಜನೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಅದ್ಧೂರಿ ಸ್ವಾಗತ
ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಬೆಳಗಾವಿಗೆ ಡಿ.ಕೆ. ಶಿವಕುಮಾರ್; ಅದ್ಧೂರಿ ಸ್ವಾಗತ
ಬೆಳಗಾವಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಿಲ್ಲಾ ಕಾಂಗ್ರೆಸ್ ನಾಯಕರು, ಶಾಸಕರು ಹಾಗೂ ಸಾವಿರಾರು ಕಾರ್ಯಕರ್ತರು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಕೋರಿದರು.
ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೊರಬರುತ್ತಿದ್ದಂತೆಯೇ ಅವರ ಆಗಮನಕ್ಕಾಗಿ ಕಾದು ನಿಂತಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು "ಡಿಕೆ... ಡಿಕೆ..." ಎಂಬ ಜಯಘೋಷ ಮೊಳಗಿಸಿದರು. ಪುಷ್ಪವೃಷ್ಟಿ, ಹೂಗುಚ್ಛಗಳ ಸಮರ್ಪಣೆ ಹಾಗೂ ಸಂಭ್ರಮಾಚರಣೆಯ ಮೂಲಕ ತಮ್ಮ ನೆಚ್ಚಿನ ನಾಯಕನನ್ನು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸಚಿವರಾದ ಎಂ.ಬಿ. ಪಾಟೀಲ, ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಅಶೋಕ ಪಟ್ಟಣ, ಬಾಬಾಸಾಹೇಬ ಪಾಟೀಲ, ಆಸೀಫ್ ಸೇಠ್, ವಿಜಯಾನಂದ ಕಾಶಪ್ಪನವರ, ಮಹೇಂದ್ರ ತಮ್ಮಣ್ಣವರ, ವಿಶ್ವಾಸ ವೈದ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಪಕ್ಷದ ಹಲವು ಮುಖಂಡರು ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದರು. ಬಳಿಕ ಮುಖ್ಯಮಂತ್ರಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿದರು.
ಸಾಂಬ್ರಾ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದು, ಮುಖ್ಯಮಂತ್ರಿ ಅವರ ವಾಹನ ಸಾಗುತ್ತಿದ್ದಂತೆ ಜೆಸಿಬಿಗಳ ಮೂಲಕ ಹೂವಿನ ಮಳೆ ಸುರಿಸಲಾಯಿತು. ಪಟಾಕಿ ಸಿಡಿಸಿ, ಘೋಷಣೆಗಳನ್ನು ಕೂಗುವ ಮೂಲಕ ಕಾರ್ಯಕರ್ತರು ಸಂಭ್ರಮಿಸಿದರು.
ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯ ಪರಿಸ್ಥಿತಿ, ಬೆಳೆಗಳ ಸ್ಥಿತಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗಾಗಿ ರಾಜ್ಯದ ವಿವಿಧ ಭಾಗಗಳಿಗೆ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು.
"ನನ್ನ ಪ್ರವಾಸ ಬಸವಕಲ್ಯಾಣದಿಂದ ಆರಂಭವಾಗಿ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಬಳಿಕ ಇಂದು ಬೆಳಗಾವಿಗೆ ತಲುಪಿದ್ದೇನೆ. ಸಚಿವರು ಸಹ ಜೊತೆಯಲ್ಲಿದ್ದು, ಈ ಭಾಗದ ಶಾಸಕರೊಂದಿಗೆ ಸಭೆ ನಡೆಸಿ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದೇನೆ" ಎಂದು ಅವರು ಹೇಳಿದರು.



Comments
Leave a Comment