ಮೂಲಸೌಕರ್ಯ, ಸಬ್ಸಿಡಿ ಸೇರಿದಂತೆ ಹಲವು ಬೇಡಿಕೆಗಳ ಕುರಿತು ಉದ್ಯಮಿಗಳ ನಿಯೋಗದೊಂದಿಗೆ ಸಚಿವ ವಿಜಯಾನಂದ ಕಾಶಪ್ಪನವರ್ ಸಭೆ
ಕೈಗಾರಿಕೆಗಳ ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಸ್ಪಂದನೆ
ಮೂಲಸೌಕರ್ಯ, ಸಬ್ಸಿಡಿ ಸೇರಿದಂತೆ ಹಲವು ಬೇಡಿಕೆಗಳ ಕುರಿತು ಉದ್ಯಮಿಗಳ ನಿಯೋಗದೊಂದಿಗೆ ಸಚಿವ ವಿಜಯಾನಂದ ಕಾಶಪ್ಪನವರ್ ಸಭೆ
ಬೆಂಗಳೂರು- ರಾಜ್ಯದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆದಷ್ಟು ಶೀಘ್ರವಾಗಿ ಪರಿಹರಿಸಿ, ಅಗತ್ಯ ಮೂಲಭೂತ ಸೌಕರ್ಯ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ವಿಜಯಾನಂದ ಕಾಶಪ್ಪನವರ್ ಭರವಸೆ ನೀಡಿದ್ದಾರೆ.
ಸೋಮವಾರ ವಿಕಾಸ ಸೌಧದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 25ಕ್ಕೂ ಹೆಚ್ಚು ಸಣ್ಣ ಕೈಗಾರಿಕೆಗಳ ಸಂಘಟನೆಗಳ ಪ್ರತಿನಿಧಿಗಳು ಸಚಿವರನ್ನು ಭೇಟಿಯಾಗಿ ತಮ್ಮ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಸ್ತೃತವಾಗಿ ಚರ್ಚಿಸಿದರು.
ನಿಯೋಗದ ಮನವಿಗಳನ್ನು ಸಹನೆಯಿಂದ ಆಲಿಸಿದ ಸಚಿವ ವಿಜಯಾನಂದ ಕಾಶಪ್ಪನವರ್, ಉದ್ಯಮಿಗಳು ಮುಂದಿಟ್ಟಿರುವ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶೀಘ್ರದಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು.
ರಾಜ್ಯದ ಆರ್ಥಿಕ ಬೆಳವಣಿಗೆ, ಹೂಡಿಕೆ ಹೆಚ್ಚಳ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಪಾತ್ರ ಮಹತ್ವದ್ದಾಗಿದೆ. ಸ್ಥಳೀಯ ಮಟ್ಟದಲ್ಲಿ ಕೈಗಾರಿಕಾ ಚಟುವಟಿಕೆಗಳು ವಿಸ್ತರಣೆಯಾಗುವುದರಿಂದ ಯುವಕರಿಗೆ ಉದ್ಯೋಗಾವಕಾಶಗಳು ಹೆಚ್ಚುವುದರ ಜೊತೆಗೆ ಜಿಲ್ಲಾವಾರು ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ ಎಂಬ ಅಭಿಪ್ರಾಯವನ್ನು ಸಚಿವರು ವ್ಯಕ್ತಪಡಿಸಿದರು.
ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ಹಣಕಾಸು ನೆರವು ಮಾತ್ರವಲ್ಲದೆ ಕೈಗಾರಿಕಾ ಪ್ರದೇಶಗಳಲ್ಲಿ ಗುಣಮಟ್ಟದ ರಸ್ತೆ, ಒಳಚರಂಡಿ, ವಿದ್ಯುತ್, ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸುವುದು, ವಿವಿಧ ಇಲಾಖೆಗಳ ಅನುಮತಿ ಪ್ರಕ್ರಿಯೆಯಲ್ಲಿ ವಿಳಂಬ ತಪ್ಪಿಸುವುದು ಹಾಗೂ ಸರ್ಕಾರದ ಪ್ರೋತ್ಸಾಹಧನಗಳು ಸಕಾಲದಲ್ಲಿ ತಲುಪುವಂತೆ ಮಾಡುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.
ಇದಕ್ಕೂ ಮುನ್ನ ನಿಯೋಗವು,
ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯಗಳ ಕೊರತೆ, ರಸ್ತೆ ಮತ್ತು ಒಳಚರಂಡಿ ವ್ಯವಸ್ಥೆ, ವಿದ್ಯುತ್ ಸೌಲಭ್ಯ, ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ, ಭೂಮಿ ಹಾಗೂ ಖಾತೆ ಸಂಬಂಧಿತ ಸಮಸ್ಯೆಗಳು, ವಿವಿಧ ಇಲಾಖೆಗಳ ಅನುಮತಿ ಪಡೆಯುವಲ್ಲಿ ಉಂಟಾಗುತ್ತಿರುವ ವಿಳಂಬ ಸೇರಿದಂತೆ ಹಲವು ವಿಚಾರಗಳನ್ನು ಉದ್ಯಮಿಗಳು ಸಚಿವರ ಗಮನಕ್ಕೆ ತಂದರು.
ವಿಶೇಷವಾಗಿ 2022ರಿಂದ ಬಾಕಿ ಉಳಿದಿರುವ ಸಬ್ಸಿಡಿ ಮೊತ್ತವನ್ನು ಬಿಡುಗಡೆ ಮಾಡಬೇಕು, ಸಣ್ಣ ಕೈಗಾರಿಕೆಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಸೌಲಭ್ಯ ಕಲ್ಪಿಸಬೇಕು, ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು ಹಾಗೂ ವಿವಿಧ ಇಲಾಖೆಗಳ ಅನುಮತಿ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಎಂಬ ಬೇಡಿಕೆಗಳನ್ನು ಉದ್ಯಮಿಗಳು ಮುಂದಿಟ್ಟರು.
ಪರಿಸರ ನಿಯಮಗಳ ಅನುಷ್ಠಾನ, ಭೂಮಿ ಮತ್ತು ಖಾತೆ ವರ್ಗಾವಣೆ, ಕೈಗಾರಿಕಾ ಪ್ರದೇಶಗಳಲ್ಲಿನ ರಸ್ತೆ-ಒಳಚರಂಡಿ ವ್ಯವಸ್ಥೆ, ಸರ್ಕಾರದಿಂದ ದೊರೆಯಬೇಕಾದ ಪ್ರೋತ್ಸಾಹಧನ ಹಾಗೂ ಸಬ್ಸಿಡಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ನಿಯೋಗ ಸಚಿವರೊಂದಿಗೆ ಚರ್ಚಿಸಿತು.
ಸಣ್ಣ ಕೈಗಾರಿಕೆಗಳಿಗೆ ಸಂಬಂಧಿಸಿದ ಸಮಸ್ಯೆಗಳು ಹಲವು ಇಲಾಖೆಗಳ ವ್ಯಾಪ್ತಿಗೆ ಬರುವುದರಿಂದ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಬಾಕಿ ಇರುವ ವಿಚಾರಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸುವಂತೆ ಮನವಿ ಮಾಡಲಾಯಿತು.
ಸಭೆಯಲ್ಲಿ ಕೈಗಾರಿಕೆ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ, KSSIDC ವ್ಯವಸ್ಥಾಪಕ ನಿರ್ದೇಶಕಿ ಗಂಗೂಬಾಯಿ ಆರ್. ಮಾನ್ಕರ್, FKCCI ಅಧ್ಯಕ್ಷ ಉಮರೆಡ್ಡಿ, KASSIA ಅಧ್ಯಕ್ಷ ನಿಂಗಣ್ಣ ಬಿರಾದಾರ್ ಸೇರಿದಂತೆ ವಿವಿಧ ಕೈಗಾರಿಕಾ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.







Comments
Leave a Comment