ಕಾಮಗಾರಿ ವಿಳಂಬ ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
ಬೆಂಗಳೂರು: ಸೆ.24
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ, ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆಯಾದರೂ ನೂತನ ಹಾಸ್ಟೆಲ್‌ಗಳ ನಿರ್ಮಾಣ ಹಾಗೂ ಹಾಲಿ ಹಾಸ್ಟೆಲ್‌ಗಳ ನವೀಕರಣ ಕಾಮಗಾರಿಗಳನ್ನು ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಹಾಸ್ಟೆಲ್‌ಗಳ ನಿರ್ಮಾಣ, ನವೀಕರಣ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಸಚಿವರು, ಅಧಿಕಾರಿಗಳಿಂದ ಕಾಮಗಾರಿ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು.
ರಾಜ್ಯದ ವಿವಿಧೆಡೆ ಹಾಸ್ಟೆಲ್‌ಗಳಿಗೆ ವಿದ್ಯಾರ್ಥಿಗಳ ಬೇಡಿಕೆ ಹೆಚ್ಚುತ್ತಿದ್ದು, ಪ್ರತಿನಿತ್ಯ ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಸ್ಟೆಲ್ ಸೌಲಭ್ಯಕ್ಕಾಗಿ ಮನವಿ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಹಣ ಮೀಸಲಿಟ್ಟಿದ್ದರೂ ಕಾಮಗಾರಿಗಳು ಆರಂಭವಾಗದಿರುವುದು ಏಕೆ ಎಂದು ಸಚಿವರು ಅಧಿಕಾರಿಗಳನ್ನು ಪ್ರಶ್ನಿಸಿದರು.
ಕರ್ನಾಟಕ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‌ಐಡಿಎಲ್) ಹಾಗೂ ಕರ್ನಾಟಕ ಹೌಸಿಂಗ್ ಕಾರ್ಪೋರೇಷನ್ ಮೂಲಕ ಕೈಗೊಳ್ಳಬೇಕಿರುವ ನೂತನ ಹಾಸ್ಟೆಲ್ ಕಟ್ಟಡಗಳ ನಿರ್ಮಾಣ ಮತ್ತು ಹಾಲಿ ಕಟ್ಟಡಗಳ ನವೀಕರಣ ಕಾಮಗಾರಿಗಳ ಕುರಿತು ಸಚಿವರು ಪ್ರತ್ಯೇಕವಾಗಿ ಮಾಹಿತಿ ಪಡೆದರು.
ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಕೈಗೊಂಡು ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ. ಯಾವುದೇ ತಾಂತ್ರಿಕ ಅಥವಾ ಆಡಳಿತಾತ್ಮಕ ಕಾರಣಗಳಿದ್ದರೆ ಅವುಗಳನ್ನು ತಕ್ಷಣ ಪರಿಹರಿಸಬೇಕು. ಕಾರಣಗಳನ್ನು ಮುಂದಿಟ್ಟುಕೊಂಡು ಕಾಮಗಾರಿ ವಿಳಂಬ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ:
ಹಾಸ್ಟೆಲ್‌ಗಳ ನವೀಕರಣ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳಿಗೆ ಸ್ಪಷ್ಟ ಗಡುವು ನೀಡಿದರು.
“ನಿಗದಿತ ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಅದಕ್ಕೆ ಕಾರಣಗಳನ್ನು ಲಿಖಿತ ರೂಪದಲ್ಲಿ ನೀಡಬೇಕು. ಅಗತ್ಯವಿದ್ದರೆ ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ನೀಡಿ ಅವರ ಮೂಲಕವೇ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುತ್ತೇನೆ. ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಮೀಸಲಿಟ್ಟಿರುವ ಅನುದಾನವನ್ನು ಸಕಾಲದಲ್ಲಿ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಸೌಲಭ್ಯ ಒದಗಿಸುವುದು ಅಧಿಕಾರಿಗಳ ಕರ್ತವ್ಯ. ಅನುದಾನ ಲಭ್ಯವಿದ್ದರೂ ಕಾಮಗಾರಿ ನಡೆಯದಿರುವುದಕ್ಕೆ ಸಬೂಬುಗಳನ್ನು ಕೇಳಲು ಸಾಧ್ಯವಿಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.
ಕಾಮಗಾರಿ ವಿಳಂಬಕ್ಕೆ ಗುತ್ತಿಗೆದಾರರಿಂದ ತಡವಾಗುತ್ತಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಗುತ್ತಿಗೆದಾರರ ಕಾರ್ಯವೈಖರಿಯ ಮೇಲ್ವಿಚಾರಣೆ ಮಾಡುವುದು ಅಧಿಕಾರಿಗಳ ಜವಾಬ್ದಾರಿ ಎಂದು ಹೇಳಿದರು.
“ಗುತ್ತಿಗೆದಾರ ಯಾರೇ ಆಗಿರಲಿ, ಇಲಾಖೆಯ ನಿಗದಿತ ಸೂಚನೆ ಹಾಗೂ ಗಡುವಿನಂತೆ ಕೆಲಸ ಮಾಡಬೇಕು. ಗುತ್ತಿಗೆದಾರರಿಂದ ಕೆಲಸ ಮಾಡಿಸಲಾಗದಿದ್ದರೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಹೇಗೆ ನಿರ್ವಹಿಸುತ್ತಿದ್ದಾರೆ? ಸುಮ್ಮನೆ ಕಾಮಗಾರಿ ವಿಳಂಬ ಮಾಡುವ ಗುತ್ತಿಗೆದಾರರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು” ಎಂದು ಸಚಿವರು ಸೂಚಿಸಿದರು.
ಅಗತ್ಯವಿದ್ದಲ್ಲಿ ಕಾಮಗಾರಿ ವಿಳಂಬಕ್ಕೆ ಕಾರಣವಾಗಿರುವ ಏಜೆನ್ಸಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಂಡು, ಪರ್ಯಾಯ ವ್ಯವಸ್ಥೆ ಮೂಲಕ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗುಣಮಟ್ಟದಲ್ಲಿ ರಾಜಿ ಇಲ್ಲ;
ಹಾಸ್ಟೆಲ್ ಕಟ್ಟಡಗಳ ನಿರ್ಮಾಣ ಮತ್ತು ನವೀಕರಣದಲ್ಲಿ ಕಾಮಗಾರಿಯ ಗುಣಮಟ್ಟಕ್ಕೆ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳಬಾರದು ಎಂದು ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
“ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾಗುತ್ತಿರುವ ಹಾಸ್ಟೆಲ್‌ಗಳು ದೀರ್ಘಕಾಲ ಬಾಳಿಕೆ ಬರುವಂತಿರಬೇಕು. ಕಾಮಗಾರಿ ವೇಗವಾಗಿ ನಡೆಯಬೇಕು ಎಂಬ ಕಾರಣಕ್ಕೆ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕಾಮಗಾರಿಯ ಗುಣಮಟ್ಟವನ್ನು ನಿರಂತರವಾಗಿ ಪರಿಶೀಲಿಸಬೇಕು” ಎಂದು ಅವರು ಹೇಳಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಆಯುಕ್ತ ಡಾ. ಕೆ. ದಯಾನಂದ್, ಕೆಆರ್‌ಐಡಿಎಲ್ ಹಾಗೂ ಕರ್ನಾಟಕ ಹೌಸಿಂಗ್ ಕಾರ್ಪೋರೇಷನ್‌ನ ಹಿರಿಯ ಅಧಿಕಾರಿಗಳು ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.






Comments
Leave a Comment